ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, BBMP ಯ 198 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ.
ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಅನುಮತಿ ನೀಡಿದ್ದು, 2 ವಾರದಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಬಿಬಿಎಂಪಿಯ 198 ವಾರ್ಡ್ ಗಳಿಗೆ ಮಾತ್ರ ಮೀಸಲಾತಿ ಪ್ರಕಾರ ಚುನಾವಣೆ ನಡೆಯಲಿದೆ. ಬಿಬಿಎಂಪಿ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ಧಾರೆ.
ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಆಗಬೇಕಿದೆ, ಐಟಿಸಿಟಿ ಬೆಂಗಳೂರು ಈಗ ದೊಡ್ಡದಾಗಿ ಬೆಳೆದಿದೆ. ಕೆಲವು ವಾರ್ಡ್ ಗಳಲ್ಲಿ ಒಂದೂವರೆ ಲಕ್ಷ ಜನರಿದ್ದಾರೆ, ಕೆಲ ವಾರ್ಡ್‌ಗಳಲ್ಲಿ ಜನಸಂಖ್ಯೆ ಕಡಿಮೆ ಇದೆ. ಹಾಗಾಗಿ ವಾರ್ಡ್ ಮರುವಿಂಗಡಣೆಗೆ ಸಮಯ ತೆಗೆದುಕೊಂಡಿದ್ದೆವು. ಈಗ ಚುನಾವಣೆಗೆ ನಾವು ಸಿದ್ದರಿದ್ದೇವೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.
BBMP ಚುನಾವಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಡುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಲರ್ಟ್ ಆಗಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಮೆಗಾ ಮೀಟಿಂಗ್ ನಡೆಸಲಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬಿಜೆಪಿ ಈಗಾಗಲೇ ಮೂರು ತಿಂಗಳಿಂದ ಬಿಬಿಎಂಪಿ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಬೂತ್ ಮಟ್ಟದಲ್ಲಿ ಬಿಜೆಪಿ ನಾಯಕರು ಸಿದ್ದತೆ ನಡೆಸುತ್ತಿದ್ದಾರೆ.