ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ದಾಖಲೆ ಮಾಡಿದ್ದು, ಈ ದಾಖಲೆ ಬರೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ ಇತ್ತೀಚೆಗೆ ಮುಕ್ತಾಯವಾದ ಏಷ್ಯಾ ಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫಾರ್ಮ್ ಗೆ ಮರಳಿದ್ದರು. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.
ವಿರಾಟ್ ಕೊಹ್ಲಿ ಟ್ವಿಟರ್ ನಲ್ಲಿ 50 ಮಿಲಿಯನ್ ಫಾಲೋವರ್ಸ್ ಗಳನ್ನು ಪಡೆಯುವ ಮೂಲಕ ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇನ್ನು ಇನ್ಸ್ಟಾಗ್ರಾಮ್ ನಲ್ಲಿ ಕೊಹ್ಲಿಗೆ ಹೆಚ್ಚಿನ ಫಾಲೋವರ್ಸ್ ಗಳಿದ್ದು, ಇನ್ಸ್ಟಾದಲ್ಲಿ 211 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಇನ್ನು ಫೇಸ್ ಬುಕ್ ನಲ್ಲಿ 49 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಏಷ್ಯಾ ಕಪ್ ನಲ್ಲಿ 5 ಇನಿಂಗ್ಸ್ ಗಳಲ್ಲಿ 92 ರ ಸರಾಸರಿಯಲ್ಲಿ 2 ಅರ್ಧ ಶತಕಗಳೊಂದಿಗೆ 276 ರನ್ ಗಳಿಸಿದ್ದರು. ಅಫ್ಘಾನಿಸ್ತಾನ ವಿರುದ್ಧ ಅಜೇಯ 122 ರನ್ ಗಳಿಸುವ ಮೂಲಕ 2019 ರ ಬಳಿಕ ಅಂತಾರಾಷ್ಟ್ರೀಯ ಶತಕ ಗಳಿಸಿದ್ದರು. ಈ ಮೂಲಕ 71 ನೇ ಶತಕ ಗಳಿಸಿದ್ದು, ರಿಕ್ಕಿ ಪಾಂಟಿಂಗ್ ರೊಂದಿಗೆ ಜಂಟಿ ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ. ಸಚಿನ್ ತೆಂಡುಲ್ಕರ್ 100 ಶತಕಗಳೊಂದಿಗೆ ಅತಿಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 3500 ಕ್ಕೂ ಹೆಚ್ಚು ರನ್ ಗಳಿಸಿದ್ದು, ರೋಹಿತ್ ಶರ್ಮಾ ಬಳಿಕ ಈ ಸಾಧನೆ ಮಾಡಿದ ಎರಡನೇ ಕ್ರಿಕೆಟಿಗ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.